ಮಂಡ್ಯ:
ಈ ಬಾರಿಯ ಮಂಡ್ಯ ಲೋಕಸಭಾ ಹಣಾಹಣೆ ಇಡೀ ಇಂಡಿಯಾನೇ ತಿರುಗಿ ನೋಡುವಷ್ಟು ತೀವ್ರ ಕುತೂಹಲ ಮೂಡಿಸಿದೆ..ಒಂದು ಕಡೆ ಮಾಜಿ ಕೇಂದ್ರ ಸಚಿವ ದಿವಂಗತ ಅಂಬರೀಶ್ ಅವರ ಧರ್ಮಪತ್ನಿ ಸುಮಲತಾ ಅಂಬರೀಶ್ ಆದರೆ ಮತ್ತೊಂದು ಕಡೆ ಮಾಜಿ ಪ್ರಧಾನಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ.
ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು ಬೃಹತ್ ಶಕ್ತಿ ಪ್ರದರ್ಶನ ತೋರುವ ಮೂಲಕ ನಾಮಪತ್ರ ಸಲ್ಲಿಸಿದರು.
ತೆರೆದ ವಾಹನದಲ್ಲಿ ಜಿಲ್ಲಾಧಿಕಾರಿ ಕಚೇರಿಯವರೆಗೂ ಭರ್ಜರಿ ರೋಡ್ ಶೋ ನಡೆಸಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.ಸಚಿವರಾದ ಡಿಕೆ ಶಿವಕುಮಾರ್, ಎಚ್ ಡಿ ರೇವಣ್ಣ, ಸಿ.ಎಸ್. ಪುಟ್ಟರಾಜ್, ಅನಿತಾ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ನಂತರ ತೆರೆದ ವಾಹನದಲ್ಲೇ ಜನತೆಯನ್ನುದ್ದೇಶಿಸಿ ಮಾತನಾಡಿದ ಇಂಧನ ಸಚಿವ ಡಿ. ಕೆ. ಶಿವಕುಮಾರ್, ಜಾತ್ಯತೀತಾ ಸರ್ಕಾರವನ್ನು ರಚಿಸಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಬೇಷರತ್ತು ಬೆಂಬಲ ನೀಡುವ ಮೂಲಕ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸರ್ಕಾರವನ್ನು ರಚಿಸಲಾಗಿದೆ. ಕೊಟ್ಟ ಮಾತನ್ನು ವಾಪಾಸ್ ಪಡೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ 8 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಮಂಡ್ಯ ಬಜೆಟ್ ಎಂದು ಟೀಕಿಸುತ್ತಿದ್ದ ಬಿಜೆಪಿಯವರು ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಪರ ಮಾಡುವ ನೈತಿಕ ಹಕ್ಕಿಲ್ಲ ಎಂದರು ಹಾಗೂ ನಿಜವಾದ ನಿಜವಾದ ಜೋಡೆತ್ತುಗಳು ನಾನು ಮತ್ತು ಡಿಕೆಶಿವಕುಮಾರ್ ಎಂದು ಹೇಳುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಟಾಂಗ್ ನೀಡಿದ್ದಾರೆ……