Breaking News

ರಾಜ್ಯದಲ್ಲಿ ಜು.31ರವರೆಗೆ ಲಾಕ್‍ಡೌನ್..!

ನೂತನ ಮಾರ್ಗಸೂಚಿಗಳು ತಕ್ಷಣದಿಂದ ಜಾರಿ....

SHARE......LIKE......COMMENT......

ರಾಜ್ಯ ಸುದ್ದಿ:

ಕೋವಿಡ್-19 ಅನ್‍ಲಾಕ್ ಹಂತ 2ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಟಿ.ಎಂ.ವಿಜಯಭಾಸ್ಕರ್ ಆದೇಶ ಹೊರಡಿಸಿದ್ದಾರೆ. ನೂತನ ಮಾರ್ಗಸೂಚಿಗಳು ತಕ್ಷಣದಿಂದ ಜಾರಿಗೆ ಬಂದಿದ್ದು, ಜು.31ರವರೆಗೆ ಚಾಲ್ತಿಯಲ್ಲಿ ಇರಲಿವೆ.  ಕಂಟೈನ್ಮೆಂಟ್ ಝೋನ್‍ಗಳ ಹೊರಗೆ ಎಲ್ಲ ಬಗೆಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಜು.31ರವರೆಗೆ ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ ಸಂಸ್ಥೆಗಳು, ತರಬೇತಿ ಕೇಂದ್ರಗಳು ಮುಚ್ಚಲ್ಪಟ್ಟಿರುತ್ತವೆ. ಆನ್‍ಲೈನ್ ಹಾಗೂ ದೂರಶಿಕ್ಷಣ ಮುಂದುವರೆಯಲಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ತರಬೇತಿ ಸಂಸ್ಥೆಗಳು ಡಿಓಪಿಟಿ ಹಾಗೂ ಡಿಪಿಎಆರ್ ಸೂಚನೆಗಳನ್ವಯ ಜು.15ರಿಂದ ಕಾರ್ಯಾರಂಭ ಮಾಡಬಹುದಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಗಳ ಅನ್ವಯ ಬಿಬಿಎಂಪಿ ಹಾಗೂ ಜಿಲ್ಲಾ ಪ್ರಾಧಿಕಾರಗಳು ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸುತ್ತವೆ. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಅಗತ್ಯ ಸೇವೆಗಳ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ವೈದ್ಯಕೀಯ ಕೆಲಸಗಳು ಹೊರತುಪಡಿಸಿ ಬೇರೆ ಕಾರಣಗಳಿಗಾಗಿ ಸಾಮಾನ್ಯ ಜನರ ಓಡಾಟಕ್ಕೆ ಕಡಿವಾಣ ಹಾಕಲಾಗಿದೆ.

ಅಂತರ್ ಜಿಲ್ಲಾ ಹಾಗೂ ಅಂತರ್ ರಾಜ್ಯ ಸಂಚಾರಕ್ಕೆ ಯಾವುದೆ ನಿರ್ಬಂಧವಿಲ್ಲ. ಇದಕ್ಕಾಗಿ ಯಾವುದೆ ಬಗೆಯ ಪ್ರತ್ಯೇಕ ಅನುಮತಿ, ಇ-ಪರ್ಮಿಟ್ ಪಡೆಯುವ ಅಗತ್ಯವಿಲ್ಲ. ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರು ಕಡ್ಡಾಯವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಂದಾಯ ಇಲಾಖೆ(ವಿಪತ್ತು ನಿರ್ವಹಣೆ) ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

65 ವರ್ಷ ಮೇಲ್ಪಟ್ಟ ವ್ಯಕ್ತಿಗಳು, ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಮಹಿಳೆಯರು, 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಸುರಕ್ಷಿತವಾಗಿರಬೇಕು. ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಆರೋಗ್ಯ ಸೇತು ಆಪ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು ಎಂದು ವಿಜಯಭಾಸ್ಕರ್ ಆದೇಶದಲ್ಲಿ ತಿಳಿಸಿದ್ದಾರೆ……